ಮೂಡಲಗಿ:ನವಕರ್ನಾಟಕ ಪರಿವರ್ತನಾ ಯಾತ್ರೆ ಹೊಸ ಇತಿಹಾಸ ನಿರ್ಮಿಸಲ್ಲಿದೆ : ಶಾಸಕ ಬಾಲಚಂದ್ರ
ನವಕರ್ನಾಟಕ ಪರಿವರ್ತನಾ ಯಾತ್ರೆ ಹೊಸ ಇತಿಹಾಸ ನಿರ್ಮಿಸಲ್ಲಿದೆ : ಶಾಸಕ ಬಾಲಚಂದ್ರ
ಮೂಡಲಗಿ ಅ 24: ನವ್ಹೆಂಬರ 18 ರಂದು ನಡೆಯಲಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶವನ್ನು ಅರಭಾವಿ ಮತಕ್ಷೇತ್ರದಲ್ಲಿ ಅದ್ಧೂರಿಯಾಗಿ ಏರ್ಪಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸೋಣ ಎಂದು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಮಠದ ಆವರಣದಲ್ಲಿ ಸೋಮವಾರ ಸಂಜೆ ಜರುಗಿದ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆ ಮತ್ತು ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಶಕ್ತಿ ಸಮಾವೇಶದ ಪೂರ್ವಸಿದ್ಧತಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರಿದೆ. ಬೂಥ ಮಟ್ಟದಲ್ಲಿ ಕಾರ್ಯಕರ್ತರು ಹೆಚ್ಚಿನ ಆಸಕ್ತಿ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಶಿಸ್ತುಬದ್ಧವಾಗಿ ನಡೆಯಬೇಕಿದೆ. ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಆದೇಶದಂತೆ ಸಕ್ರೀಯವಾಗಿ ಸಂಘಟನೆಯಲ್ಲಿ ತೊಡಗಬೇಕೆಂದು ಅವರು ಕೋರಿದರು.
2018ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಬಿ.ಎಸ್. ಯಡಿಯೂರಪ್ಪನವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಅರಭಾವಿ ಮತಕ್ಷೇತ್ರದಿಂದ ನಾನೇ ಸ್ಪರ್ಧಿಸಲಿದ್ದು, ಈ ಚುನಾವಣೆಯಲ್ಲಿ ನಾನೇ ಗೆಲ್ಲುತ್ತೇನೆ. ವಿರೋಧಿಗಳ ಶಕ್ತಿ ಏನೇನೂ ನಡೆಯುವುದಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ದೇವರು ಹಾಗೂ ಜನರ ಆಶೀರ್ವಾದ ನನ್ನ ಮೇಲೆ ಸದಾ ಇರುವದರಿಂದ ನನ್ನದೇ ಗೆಲುವು ಎಂದು ಹೇಳಿದರು.
ಕಳೆದ ನಾಲ್ಕುವರೆ ವರ್ಷದಲ್ಲಿ ಅರಭಾವಿ ಮತಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಶ್ರಮಿಸುತ್ತಿದ್ದು, ಜನರ ಮೂಲ ಸೌಕರ್ಯಕ್ಕೆ ಹೆಚ್ಚಿನಾಧ್ಯತೆ ನೀಡಿದ್ದೇನೆ. ಅದರಲ್ಲೂ ಕುಡಿಯುವ ನೀರು, ಶಿಕ್ಷಣ, ರಸ್ತೆ, ಇಂಧನ, ನೀರಾವರಿ ಮುಂತಾದ ಕ್ಷೇತ್ರಗಳಿಗೆ ವಿಶೇಷ ಪ್ರಾಶಸ್ತ್ಯ ಕೊಟ್ಟಿದ್ದೇನೆ. ಚುನಾವಣೆ ಸಮೀಪಿಸುತ್ತಿರುವಂತೆ ಕೆಲ ವಿರೋಧಿಗಳು ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೆರೆಸಲು ಪ್ರಯತ್ನಿಸುತ್ತಿದ್ದಾರೆ. ಕ್ಷೇತ್ರದಲ್ಲಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿದ್ದೇನೆ. ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇರುವದರಿಂದ ರಸ್ತೆಗಳು ಸಂಚಾರ ದಟ್ಟನೆ ಹಾಗೂ ಮಳೆಯಿಂದ ಹಾಳಾಗಿವೆ. ಆದಾಗ್ಯೂ ಹಾಳಾಗಿರುವ ರಸ್ತೆಗಳನ್ನು ಡಿಸೆಂಬರ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಾಜ್ಯ ಬಿಜೆಪಿ ಕಾರ್ಯದರ್ಶಿ ಭಾರತಿ ಮಗದುಮ್ಮ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹಿಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೇ 2ನೇ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸಂಘಟನಾ ಚತುರರಾಗಿರುವ ಬಾಲಚಂದ್ರ ಅವರು ಬಿಜೆಪಿಗೆ ಆಸರೆಯಾಗಿದ್ದಾರೆಂದು ಶ್ಲಾಘಿಸಿದರು. ಬಿಜೆಪಿಯು ಕಾರ್ಯಕರ್ತರನ್ನು ಗೌರವಿಸುವ ಏಕೈಕ ಪಕ್ಷ. ಪಕ್ಷದ ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುವಂತೆ ಕೋರಿದರು. ಗುಜರಾತ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜಕೀಯ ಚಾಣಕ್ಯ ಅಮೀತ ಶಾ ಅವರು ಕರ್ನಾಟಕದಲ್ಲಿ ಠಿಕಾಣಿ ಹೂಡಿ ಗುಜರಾತ ಚುನಾವಣಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಅಂತಹ ಪ್ರಯೋಗಗಳನ್ನು ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ರಾಜ್ಯ ಸಹಕಾರಿ ಮಾರಾಟ ಮಂಡಳ ಉಪಾಧ್ಯಕ್ಷ ಬಸಗೌಡ ಪಾಟೀಲ ವಹಿಸಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗೂಳಪ್ಪ ಹೊಸಮನಿ, ಗುರುಪಾದ ಕಳ್ಳಿ, ಪಟ್ಟಣ ಪಂಚಾಯತ ಅಧ್ಯಕ್ಷೆ ಶೋಭಾ ಬಬಲಿ, ಮೂಡಲಗಿ ಪುರಸಭೆ ಅಧ್ಯಕ್ಷೆ ಕಮಲವ್ವ ಹಳಬರ, ಅರಭಾವಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಪದ್ಮಾವತಿ ದೇವುಗೋಳ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಪ್ರೇಮಾ ಭಂಡಾರಿ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಮಾದರ, ಅಶೋಕ ಪರುಶೆಟ್ಟಿ, ಹಣಮಂತ ತೇರದಾಳ, ಬಸವಂತ ಕಮತಿ, ರವೀಂದ್ರ ಸೋನವಾಲ್ಕರ, ರಾಜು ಕರಿಹೊಳಿ, ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.