ಗೋಕಾಕ:ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಶಾಸಕ ಬಾಲಚಂದ್ರ ಮನವಿ
ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಶಾಸಕ ಬಾಲಚಂದ್ರ ಮನವಿ
ಗೋಕಾಕ ಎ 15 : ಘಟಪ್ರಭಾ ಬಲದಂಡೆ-ಎಡದಂಡೆ, ಸಿಬಿಸಿ ಕಾಲುವೆಗಳಿಗೆ ಹಾಗೂ ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಕೂಡಲೇ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಈ ಬಗ್ಗೆ ಭಾನುವಾರ ಸಂಜೆ ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು, ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಅಲ್ಲದೇ ಜಾನುವಾರುಗಳಿಗೆ ಸಹ ಕುಡಿಯಲಿಕ್ಕೆ ನೀರು ಸಿಗುತ್ತಿಲ್ಲ. ಅಂತರ್ಜಲಮಟ್ಟ ತೀವ್ರ ಕುಸಿದಿರುವುದರಿಂದ ಕೊಳವೆ ಬಾವಿಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಪ್ರಸಕ್ತ ಪರಿಸ್ಥಿತಿಯನ್ನು ಅವಲೋಕಿಸಿ ಕೂಡಲೇ ಹಿಡಕಲ್ ಜಲಾಶಯದಿಂದ ಮೂರು ಕಾಲುವೆಗಳು ಹಾಗೂ ನದಿಗೆ 10 ದಿನಗಳವರೆಗೆ ನೀರು ಹರಿಸಿ ಸಾರ್ವಜನಿಕರ ಹಾಗೂ ಜಾನುವಾರಗಳ ಹಿತ ಕಾಪಾಡುವಂತೆ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಕೋರಿರುವುದಾಗಿ ಹೇಳಿದ್ದಾರೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು, ಘಟಪ್ರಭಾ ಎಡದಂಡೆ, ಬಲದಂಡೆ, ಸಿಬಿಸಿ ಕಾಲುವೆಗಳು ಮತ್ತು ಘಟಪ್ರಭಾ ನದಿಗೆ ನೀರು ಹರಿಸಲು ಪ್ರಾದೇಶಿಕ ಆಯುಕ್ತರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.