RNI NO. KARKAN/2006/27779|Sunday, December 22, 2024
You are here: Home » breaking news » ಬೆಳಗಾವಿ:ಸಚಿವ ಡಿ.ಕೆ.ಶಿವಕುಮಾರ ಅವರ ನಿಲುವು ಖಂಡಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರ ಆಕ್ರೋಶ

ಬೆಳಗಾವಿ:ಸಚಿವ ಡಿ.ಕೆ.ಶಿವಕುಮಾರ ಅವರ ನಿಲುವು ಖಂಡಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರ ಆಕ್ರೋಶ 

ಸಚಿವ ಡಿ.ಕೆ.ಶಿವಕುಮಾರ ಅವರ ನಿಲುವು ಖಂಡಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರ ಆಕ್ರೋಶ
ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಮೇ 20 :

 

ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರ ನಿಲುವು ಖಂಡಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರು ಮತ್ತು ಸಾರ್ವಜನಿಕರು ಬೆಳಗಾವಿಯಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಮಾಡಿದರು.
ನಗರದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ಮಾಡಿದರು. ಇದರಿಂದಾಗಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಯಿತು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಹರಿಹಾಯ್ದರು. ಸಚಿವರ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಭೀಕರ ಬರಗಾಲದಿಂದ ಜನ, ಜಾನುವಾರುಗಳಿಗೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಘಟಪ್ರಭಾ ನದಿ ತೀರದ ಗ್ರಾಮಸ್ಥರ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ತಕ್ಷಣವೇ ನೀರು ಬಿಡುಗಡೆ ಮಾಡಬೇಕು. ಮೇ 24 ರಿಂದ ಘಟಪ್ರಭಾ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಈ ಭಾಗದ ಜನತೆಗೆ ಅನುಕೂಲವಾಗುತ್ತದೆ. ಇದರಿಂದಾಗಿ ಅಂತರ್ಜಲಮಟ್ಟ ಹೆಚ್ಚಳವಾಗಿ ತೆರೆದ ಬಾವಿ ಹಾಗೂ ಕೊಳವೆಬಾವಿಗಳು ರಿಚಾರ್ಜ ಆಗುತ್ತವೆ ಎಂದರು.
, ಘಟಪ್ರಭಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವ ಕ್ರಮವನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ನಾವು ಕೃಷ್ಣಾ ನದಿಗೆ ನೀರು ಹರಿಸಲು ಬಿಡುವುದಿಲ್ಲ. ಮೇ 21 ರಿಂದ ಹಿಡಕಲ್ ಜಲಾಶಯದಿಂದ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತದೆ ಎಂಬ ಮಾಹಿತಿ ಬಂದಿದೆ. ಇದರಿಂದಾಗಿ ಜಿಎಲ್‍ಬಿಸಿ , ಜಿಆರ್‍ಬಿಸಿ ಕಾಲುವೆ ವ್ಯಾಪ್ತಿಯ ರೈತರಿಗೆ ಮತ್ತು ಸಾರ್ವಜನಿಕರಿಗೆ ತುಂಬಾ ಅನ್ಯಾಯವಾಗುತ್ತದೆ. ಒಂದು ವೇಳೆ ಕೃಷ್ಣಾ ನದಿಗೆ ನೀರು ಹರಿಸಿದರೆ ಮೇ. 21 ರಂದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಜನತೆಗೆ ಅನುಕೂಲವಾಗುವಂತೆ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ತಲಾ 2000 ಕ್ಯುಸೆಕ್‍ನಂತೆ 5 ದಿನಗಳವರೆಗೆ ತಲಾ 1 ಟಿಎಂಸಿ ಹಾಗೂ ಘಟಪ್ರಭಾ ನದಿಗೆ 1.15 ಟಿಎಂಸಿ ನೀರನ್ನು ತುರ್ತಾಗಿ ಹರಿಸಬೇಕು ಎಂದು ಆಗ್ರಹಿಸಿದರು.
ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಲ್ಲಿ ವಿಫಲವಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ 1 ಟಿಎಂಸಿ ನೀರು ಬಿಡುಗಡೆಗೆ ಆದೇಶ ಹೊರಡಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಸಾರ್ವಜನಿಕರು ಈ ಭಾಗದ ರೈತರು ಸಚಿವರ ಆದೇಶದ ವಿರುದ್ಧ ಹೋರಾಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ನೂರಾರು ರೈತರು, ಸಾರ್ವಜನಿಕರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪರ ಹಾಗೂ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುz್ದÉೀಶಿಸಿ ಮಾತನಾಡಿದ ಜಿಪಂ ಸದಸ್ಯ ಗೋವಿಂದ ಕೊಪ್ಪದ, ರೈತ ಮುಖಂಡ ಗಣಪತಿ ಇಳಿಗೇರಿ, ಮುಖಂಡ ಬಸವಂತ ಕಮತಿ ಅವರು, ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜನತೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಚಿವ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿರುವುದು ಖಂಡನೀಯ. ನೀರಿನ ವಿಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸಲಿ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಈ ಭಾಗದ ರೈತರಿಗೆ ಅನ್ಯಾಯವಾಗಿರುವ ವಿಚಾರದಲ್ಲಿ ರಾಜ್ಯದಲ್ಲೇ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ದನಿ ಎತ್ತಿದ್ದಾರೆ. ಅವರು ನಿತ್ಯ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ಭೇಟಿ ನೀಡಿ, ರೈತರಿಗೆ ನೀರು ಮುಟ್ಟಿಸುವಲ್ಲಿ ಶ್ರಮಿಸುತ್ತಿದ್ದಾರೆ. ಇವರಿಗೆ ಸಮಸ್ತ ರೈತರ ಪರವಾಗಿ ಅಭಿನಂದಿಸುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಹಿಡಕಲ್ ಡ್ಯಾಂ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಅರಬಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ವಿಠ್ಠಲ ಪಾಟೀಲ, ರೈತ ಮುಖಂಡ ಭೀಮಸಿ ಗಡಾದಿ, ಮಹಾದೇವ ತಾಂಬಡೆ, ಲಕ್ಷ್ಮಣ ನೀಲನ್ನವರ, ಸಿದ್ದಪ್ಪ ಹಮ್ಮನವರ, ರಾಮಯ್ಯ ಮಠದ, ಮಹಾದೇವ ತುಕ್ಕಾನಟ್ಟಿ, ಸುಭಾಷ ಹಾವಾಡಿ, ರಾಜು ಭೈರಗೋಳ ಸೇರಿದಂತೆ ನೂರಾರು ರೈತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Related posts: