RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ನೆರೆ ಹಾವಳಿ ಸಂಬಂಧ ವಿಶೇಷ ಅನುದಾನಕ್ಕಾಗಿ ಕೇಂದ್ರ ಸಚಿವರ ಭೇಟಿ

ಗೋಕಾಕ:ನೆರೆ ಹಾವಳಿ ಸಂಬಂಧ ವಿಶೇಷ ಅನುದಾನಕ್ಕಾಗಿ ಕೇಂದ್ರ ಸಚಿವರ ಭೇಟಿ 

ನೆರೆ ಹಾವಳಿ ಸಂಬಂಧ ವಿಶೇಷ ಅನುದಾನಕ್ಕಾಗಿ ಕೇಂದ್ರ ಸಚಿವರ ಭೇಟಿ

 

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಸೆ 11 :

 

 

ನೆರೆ ಸಂತ್ರಸ್ಥರಿಗೆ ವಿಶೇಷ ಅನುದಾನಕ್ಕಾಗಿ ಕೇಂದ್ರದ ಮೊರೆ ಹೋಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರ ರಸಗೊಬ್ಬರ ಸಚಿವ ಡಿ.ವ್ಹಿ. ಸದಾನಂದಗೌಡ ಅವರನ್ನು ಭೇಟಿ ಮಾಡಿ ಸಂತ್ರಸ್ಥರ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಟ್ಟರು.
ನವದೆಹಲಿಯ ಶಾಸ್ತ್ರಿ ಭವನದಲ್ಲಿ ಬುಧವಾರ ಮುಂಜಾನೆ ಕೇಂದ್ರ ಸಚಿವ ಸದಾನಂದಗೌಡ ಅವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಉತ್ತರ ಕರ್ನಾಟಕದಲ್ಲಿ ಕಳೆದ ಅಗಸ್ಟ್ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ನಷ್ಟದ ಕುರಿತು ಪ್ರಧಾನಿಗಳ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸುವಂತೆ ಸಚಿವರನ್ನು ಕೋರಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಗೆ ಉತ್ತರಿಸಿದ ಕೇಂದ್ರ ಸಚಿವ ಸದಾನಂದಗೌಡ ಅವರು, ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಈಗಾಗಲೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ ಅವರ ಜೊತೆಗೂಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಎರಡು ಬಾರಿ ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದೇವೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದಾರೆ. ಇಷ್ಟರಲ್ಲಿಯೇ ನೆರೆ ಹಾವಳಿಗೆ ತತ್ತರಿಸಿರುವ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುತ್ತೇನೆಂದು ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದ್ದಾರೆಂದು ಸದಾನಂದಗೌಡರು ಇದೇ ಸಂದರ್ಭದಲ್ಲಿ ತಿಳಿಸಿದರೆನ್ನಲಾಗಿದೆ.
ಮುರಳೀಧರರಾವ್ ಭೇಟಿ : ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಮುರಳೀಧರರಾವ್ ಅವರನ್ನು ಭೇಟಿ ಮಾಡಿದರು. ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುರಳೀಧರರಾವ್ ಅಭಿನಂದಿಸಿದರು. ಅಲ್ಲದೇ ನೆರೆ ಹಾವಳಿಗೆ ತುತ್ತಾಗಿರುವ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮುರಳೀಧರರಾವ್ ಅವರನ್ನು ಕೋರಿದರು.
ನೆಲಮಂಗಲ ಮಾಜಿ ಶಾಸಕ ಎಂ.ವ್ಹಿ. ನಾಗರಾಜ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts: