RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಡಿ.17 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಶಂಕುಸ್ಥಾಪನೆ : ಡಾ.ರಾಜೇಂದ್ರ ಸಣ್ಣಕ್ಕಿ ಮಾಹಿತಿ

ಗೋಕಾಕ:ಡಿ.17 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಶಂಕುಸ್ಥಾಪನೆ : ಡಾ.ರಾಜೇಂದ್ರ ಸಣ್ಣಕ್ಕಿ ಮಾಹಿತಿ 

ಡಿ.17 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಶಂಕುಸ್ಥಾಪನೆ : ಡಾ.ರಾಜೇಂದ್ರ ಸಣ್ಣಕ್ಕಿ ಮಾಹಿತಿ

 

ಗೋಕಾಕ ಡಿ 15 : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಾ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವು ಡಿ.17 ರಂದು ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಿ.17 ರಂದು ಸಂಜೆ 4 ಗಂಟೆಗೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಆವರಣದಲ್ಲಿ ನಡೆಯುವ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೆರವೇರಿಸುವರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಮಹಾಸ್ವಾಮಿಗಳು ಹಾಗೂ ಸಾನಿಧ್ಯವನ್ನು ಸಂಗೊಳ್ಳಿಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವರು.
ಸಮಾರಂಭದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನೆರವೇರಿಸುವರು.
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪೌರಾಡಳಿತ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ, ಸಚಿವರಾದ ಬಂಡೆಪ್ಪ ಕಾಶಂಪುರ, ಆರ್. ಶಂಕರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ, ವಿಧಾನ ಪರಿಷತ್ ಸದಸ್ಯ ಹೆಚ್.ಎಂ. ರೇವಣ್ಣ ಸೇರಿದಂತೆ ಹಲವು ಗಣ್ಯರು ಆಗಮಿಸುವರು.
ಅಧ್ಯಕ್ಷತೆಯನ್ನು ಶಾಸಕ ಮಹಾಂತೇಶ ಕೌಜಲಗಿ ವಹಿಸುವರು.
ಜಿಲ್ಲೆಯ ಎಲ್ಲ ಸಂಸದರು, ಶಾಸಕರು ಹಾಗೂ ಚುನಾಯಿತ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಸಿದ್ಧರಾಮಯ್ಯನವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಾ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 267 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಅದರನ್ವಯ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್, ಕಲ್ಯಾಣ ಮಂಟಪ ಹಾಗೂ ಇತರೇ ಕಾಮಗಾರಿಗಳು, ನಂದಗಢ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸ್ಮಾರಕ ಮ್ಯೂಜಿಯಂ(ವೀರಭೂಮಿ), ಯಾತ್ರಿ ನಿವಾಸ ಹಾಗೂ ಇತರೇ ಕಾಮಗಾರಿಗಳು ಮತ್ತು ಸಂಗೊಳ್ಳಿ ರಾಯಣ್ಣ ಕೆರೆ ಜೀರ್ಣೋದ್ಧಾರ ಕಾಮಗಾರಿಗಳ ಶಂಕುಸ್ಥಾಪನೆ ನಡೆಯಲಿದೆ.
ಅಭಿನಂದನೆ : ಸಮಾಜದ ಬಹು ವರ್ಷಗಳ ಪ್ರಮುಖ ಬೇಡಿಕೆಯನ್ನು ಈಡೇರಿಸಿ ಅದಕ್ಕೆ ಅನುದಾನ ಕಲ್ಪಿಸಿಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಡಾ.ರಾಜೇಂದ್ರ ಸಣ್ಣಕ್ಕಿ ಅವರು ಸಮಾಜದ ಪರವಾಗಿ ಅಭಿನಂದಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಾಗೂ ಸಮಾಜ ಬಾಂಧವರು ಆಗಮಿಸಿ ಶೋಭೆ ತರುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts: